ದಲಿತರಿಗೆ ಕ್ಷಮೆ ಕೇಳಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಇಲ್ಲವಾದರೆ ಉಗ್ರ ಹೋರಾಟ : ಗೋವಿಂದ ಕಾರಜೋಳ ವಿರುದ್ದ ಸಾಮಾಜಿಕ ಸಂಘರ್ಷ ಸಮಿತಿ ಪ್ರತಿಭಟನೆ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ.02 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ಜಾತಿ ನಿಂದನೆಯಾದಾಗ ಕೇಸು ನೀಡದೆ ಹೊಂದಿಕೊಂಡು ಹೋಗಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಎಸ್ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಪಾರ್ಲಿಮೆಂಟ್‍ಗೆ ಪ್ರವೇಶಿಸಿರುವ ಗೋವಿಂದ ಕಾರಜೋಳ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಹಿತ ಕಾಯಲು ಬದ್ದರಾಗಿರಬೇಕೆ ವಿನಃ ಮೇಲ್ಜಾತಿಯವರನ್ನು ಓಲೈಕೆ ಮಾಡುವ ಕೆಲಸಕ್ಕೆ ಕೈಹಾಕಬಾರದು. ಕೂಡಲೆ ದಲಿತರಲ್ಲಿ ಕ್ಷಮೆ ಕೇಳಿ ಸಂಸದ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು. ಇವೆರಡು ಆಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೆ.ಕುಮಾರ್ ಎಚ್ಚರಿಸಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ದಲಿತರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ, ಕೊಲೆಗಳು ನಡೆಯುತ್ತಿರುವ ಇಂದಿನ ದಿನಮಾನಗಳಲ್ಲಿ ಸಂಸದ ಗೋವಿಂದ ಕಾರಜೋಳರವರು ದಲಿತ ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವುದು ದಲಿತರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿದೆ. ಇನ್ನು ಮುಂದೆ ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಘೇರಾವ್ ಹಾಕಲಾಗುವುದೆಂದರು.
ಪ್ರೊ.ಸಿ.ಕೆ.ಮಹೇಶ್, ನಿವೃತ್ತ ತಹಶೀಲ್ದಾರ್ ಮಲ್ಲಿಕಾರ್ಜುನ್ ಹಿರೇಹಳ್ಳಿ, ಲೇಖಕ ಹೆಚ್.ಆನಂದ್‍ಕುಮಾರ್, ಸಿ.ಎ.ಚಿಕ್ಕಣ್ಣ, ಎಂ.ರಾಮಾಂಜನೇಯ,
ಡಿ.ದುರುಗೇಶಪ್ಪ, ಆರ್.ರಾಮಲಿಂಗಪ್ಪ, ಜಯಪ್ಪ, ಆರ್.ಮೈಲೇಶ್, ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಡಿ.ಡಿ.ಪಿ.ಐ. ಕೆ.ರುದ್ರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.