ಚಿತ್ರದುರ್ಗ | ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ
ಸುದ್ದಿಒನ್, ಚಿತ್ರದುರ್ಗ, ಜನವರಿ.17 : ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿದರು.
ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಪ್ರೋತ್ಸಾಹಧನಕ್ಕೆ ಸಂಬಂಧಪಟ್ಟಂತೆ ಯಾವ ಕ್ರಮವಹಿಸಲಾಗಿದೆ ಎಂಬ ಶಾಸಕ ಟಿ.ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಅವರು,
ಪ್ರಸ್ತುತ ಅಡಿಕೆ ಬೆಳೆಯನ್ನು ಬೆಳೆಯುತ್ತಿರುವ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಇತರೆ ಪ್ರದೇಶಗಳಲ್ಲಿ ಅಡಿಕೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಡಿ ಸಹಾಯಧನ ಪಡೆಯಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿರುವುದಿಲ್ಲ.
ಹೀಗಾಗಿ ಜಿಲ್ಲೆಯ ಜನಪ್ರತಿನಿಧಿಗಳ ಸೂಚನೆಯಂತೆ, ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಸರ್ಕಾರದಿಂದ ಪ್ರೋತ್ಸಾಹಧನ ಲಭ್ಯವಾಗುವಂತಾಗಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕಳೆದ ನ. 29 ರಂದು ತೋಟಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಸಚಿವರು ಒಪ್ಪಿಗೆ ನೀಡಿದ್ದಾರೆ. ಶೀಘ್ರವೇ ಸರ್ಕಾರ ಇದಕ್ಕೆ ಅನುಮೋದನೆ ನೀಡುವ ನಿರೀಕ್ಷೆ ಇದೆ ಎಂದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು, ಹನಿ ನೀರಾವರಿ ಹಾಗೂ ನರೇಗಾ ಯೋಜನೆಯಡಿ ಸಿಗುವ ಸಹಾಯಧನದಂತೆ ಜಿಲ್ಲೆಯ ಅಡಿಕೆ ಬೆಳೆಗೂ ಒದಗಿಸಬೇಕು ಎಂಬ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯಾಗುವ ನಿರೀಕ್ಷೆ ಇದೆ ಎಂದು ಸಭೆಗೆ ತಿಳಿಸಿದರು.