ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ
ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನ ಪರಿಶಿಷ್ಟ ಜಾತಿ ಮೀಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಲಾಗಿದೆ.
ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಬಹುದು.
ಸಾರ್ವತ್ರಿಕ ರಜಾದಿನ ಹೊರತು ಪಡಿಸಿ
ಏಪ್ರಿಲ್ 4 ವರೆಗೆ ಪ್ರತಿದಿನ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಪಡೆದುಕೊಳ್ಳಬಹುದು.
ಏಪ್ರಿಲ್ 5 ರಂದು ಬೆಳಿಗ್ಗೆ 11.00ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯುಲು ಇಚ್ಛಿಸಿದ್ದಲ್ಲಿ, ತಿಳಿವಳಿಕೆ ಪತ್ರವನ್ನು ಉಮೇದುವಾರ ಅಥವಾ ಸೂಚಕ ಅಥವಾ ಉಮೇದುವಾರ ನೇಮಿಸಿದ ಏಜೆಂಟ್ ಏಪ್ರಿಲ್ 8 ರಂದು ಮಧ್ಯಾಹ್ನ 3.00 ಗಂಟೆಗೆ ಮುಂಚೆ ಚುನಾವಣಾಧಿಕಾರಿಗೆ ಸಲ್ಲಿಸಬೇಕು. ಏಪ್ರಿಲ್ 26 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 6.00 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.