For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಬಿ.ಡಿ.ರಸ್ತೆ ಅಗಲೀಕರಣಕ್ಕೆ ಕ್ರಮವಹಿಸಿ : ಸಚಿವ ಡಿ.ಸುಧಾಕರ್

06:09 PM Jun 26, 2024 IST | suddionenews
ಚಿತ್ರದುರ್ಗ   ಬಿ ಡಿ ರಸ್ತೆ ಅಗಲೀಕರಣಕ್ಕೆ ಕ್ರಮವಹಿಸಿ   ಸಚಿವ ಡಿ ಸುಧಾಕರ್
Advertisement

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಚಿತ್ರದುರ್ಗ ಜಿಲ್ಲಾ ಕೇಂದ್ರದ ನಗರದ ಬಿ.ಡಿ.ರಸ್ತೆಯನ್ನು ಪ್ರಥಮಾಧ್ಯತೆ ಮೇರೆಗೆ ಅಗಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದಿಂದ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದವರೆಗೂ ನಿಯಮಾನುಸಾರ ರಸ್ತೆ ಅಗಲವಿರಬೇಕು. ಕಿರಿದಾಗಿರುವ ಕಡೆಗಳಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ವಹಿಸಬೇಕು. ಒಂದು ವೇಳೆ ಈ ಮಾರ್ಗದಲ್ಲಿ ಯಾರಾದರೂ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರೆ ಅದನ್ನು ಕೂಡಲೇ ತೆರವುಗೊಳಿಸಲು ಕ್ರಮವಹಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ, ಜಿಲ್ಲಾ ಕೇಂದ್ರದ ಮುಖ್ಯ ರಸ್ತೆಯನ್ನು ಅಗಲೀಕರಣಕ್ಕೆ ತ್ವರಿತವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಬರುವವರು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಕಳೆದ 29 ವರ್ಷದಿಂದ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಲು ಸಾಧ್ಯವಿಲ್ಲ. ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದ ಶಾಸಕರು, ಹೊಳಲ್ಕೆರೆಯಲ್ಲಿ ಯಾರ ಮುಲಾಜಿಗೂ ಒಳಗಾಗದೇ ರಸ್ತೆ ಅಗಲೀಕರಣ ಮಾಡಲಾಗಿದೆ ಎಂದು ತಿಳಿಸಿದರು.

ಶಾಸಕ ವೀರೇಂದ್ರ ಪಪ್ಪಿ ಮಾತನಾಡಿ, ಚಿತ್ರದುರ್ಗ ನಗರದ ಒಂದು ಸುತ್ತು ಈಗಾಗಲೇ ಡಿವೈಡರ್ ತೆರವು ಮಾಡಲಾಗಿದೆ. ಜೆಸಿಆರ್ ರಸ್ತೆ, ಎಸ್‍ಬಿಐ ಬ್ಯಾಂಕ್‍ನಿಂದ ಗಾಂಧಿ ಸರ್ಕಲ್‍ವರೆಗಿನ ಮಾರ್ಗದಲ್ಲಿ ಸ್ಕೈವಾಕ್‍ಗೆ ಪ್ರಸ್ತಾವನೆ ಸಿದ್ದವಾಗುತ್ತಿದೆ.

ನಗರದ ಚಳ್ಳಕೆರೆ ಗೇಟ್‍ನಲ್ಲಿ ಬಹಳಷ್ಟು ವಾಹನಗಳು ಸಂಚಾರ ಮಾಡುತ್ತವೆ. ಹಾಗಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಚಳ್ಳಕೆರೆ ಗೇಟ್‍ನಲ್ಲಿ ವೃತ್ತ ಮಾಡಿಸಿ ಎಂದರು. ಇದಕ್ಕೆ ಧ್ವನಿಗೂಡಿಸಿದ ಶಾಸಕ ಟಿ.ರಘುಮೂರ್ತಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Tags :
Advertisement