ಚಳ್ಳಕೆರೆ - ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ಬಿ.ಜಿ.ಕೆರೆ ಬಳಿ ಸ್ಕೈವಾಕ್ ನಿರ್ಮಾಣ
ಸುದ್ದಿಒನ್, ಚಿತ್ರದುರ್ಗ, ಜನವರಿ. 09 : ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೆ ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಬಿ.ಜಿ.ಕೆರೆ ಬಳಿ ದ್ವಿ ಚಕ್ರ ವಾಹನ ಹಾಗೂ ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈವಾಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು 2 ತಿಂಗಳ ಕಾಲವಕಾಶ ಬೇಕಾಗಿದೆ. ನಂತರ 4 ತಿಂಗಳ ಅವಧಿಯಲ್ಲಿ ಸೇತುವೆಯನ್ನು ಅಳವಡಿಸಲಾಗುವುದು ಎಂದು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಗೌರವ್ ಹೇಳಿದರು.
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಳಕಾಲ್ಮೂರು ತಾಲ್ಲೂಕು ಬಿ.ಜೆ.ಕರೆ ಹಾಗೂ ತಳಕು ಹೋಬಳಿಯ ಗಿರಿಯಮ್ಮನಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಬಳಿ ಸ್ಥಳೀಯರು ರಸ್ತೆ ದಾಟಲು ಸೂಕ್ತ ಕೆಳಸೇತುವೆ ಇಲ್ಲದೇ ಸಂಕಷ್ಟ ಅನುಭಿಸುತ್ತಿದ್ದಾರೆ. ಬಿ.ಜಿ.ಕೆರೆ ಬಳಿ ಕಳೆದ ಒಂದು ವರ್ಷದಲ್ಲಿ ಅಪಘಾತದಿಂದ 6 ಜನರು ಮೃತಪಟ್ಟಿದ್ದಾರೆ.
ಅಪಘಾತವಾದಾಗ ಸಾರ್ವಜನಿಕರು ಹೆದ್ದಾರಿ ತಡೆದು ಪ್ರತಿಭಟಿಸುವುದರಿಂದ, ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟಾಗುತ್ತಿದೆ. 3 ಅಪಘಾತ ವಲಯಗಳಲ್ಲಿ ಸ್ಥಳೀಯರು ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಹೆದ್ದಾರಿ ಪ್ರಾಧಿಕಾರದಿಂದ ಸಮಸ್ಯೆ ಪರಿಹಾರಕ್ಕೆ ಹಾಗೂ ಅಪಘಾತ ತಡೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದ್ರ ಕುಮಾರ್ ಮೀನಾ ಸಭೆಯಲ್ಲಿ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ಅಹವಾಲುಗಳು ಪ್ರತಿನಿತ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿವೆ. ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊಸದುರ್ಗ-ಹೊಳಲ್ಕೆರೆ ಹಾಗೂ ಹಿರಿಯೂರು-ಹುಳಿಯಾರು ರಾಷ್ಟ್ರೀಯ ಹೆದ್ದಾರಿ ಮಾರ್ಗಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಈಗಾಗಲೇ ನಿಗಧಿತ ಕಾಲಾವಧಿ ಮುಗಿದಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಕೂಡಲೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.