ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ : ವಕೀಲ ಸಿ.ಶಿವುಯಾದವ್
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.03 : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎದುರಾಳಿ ಅಭ್ಯರ್ಥಿಗಿಂತ ಹೆಚ್ಚು ಹಣ ಖರ್ಚು ಮಾಡಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಗೆಲ್ಲಿಸಿಕೊಳ್ಳಬೇಕೆಂದು ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಬಹಿರಂಗ ಸಭೆಯಲ್ಲಿ ಹೇಳಿರುವುದು ವೀಡಿಯೋ ವೈರಲ್ ಆಗಿರುವುದರಿಂದ ಚುನಾವಣಾ ಆಯೋಗ ಕ್ರಿಮಿನಲ್ ಕೇಸು ದಾಖಲಿಸಿ ಸಂಪೂರ್ಣ ತನಿಖೆ ನಡೆಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಸಂಚಾಲಕ ಸಿ.ಶಿವುಯಾದವ್ ಒತ್ತಾಯಿಸಿದರು.
ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಸಂವಿಧಾನ ಬಾಹಿರ ಕೆಲಸಕ್ಕೆ ಕೈಹಾಕಿದ್ದು, ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಏನು ಬೇಕಾದರೂ ಮಾಡುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಸಾಕು. ಮೊಳಕಾಲ್ಮೂರಿನಲ್ಲಿ ನಡೆದ ಸಭೆಯಲ್ಲಿ ಹಣ ಹಂಚಿಕೆ ಕುರಿತು ಚರ್ಚೆಯಾಗಿದ್ದರೂ ಚುನಾವಣಾ ಆಯೋಗ ಯಾವ ರೀತಿಯ ಕ್ರಮ ಕೈಗೊಳ್ಳದೆ ಸುಮ್ಮನಿದೆ. ಈ ಸಂಬಂಧ ಜೀರ್ಲಹಳ್ಳಿ ತಿಪ್ಪೇಸ್ವಾಮಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಬೇಕು. ಪಾರದರ್ಶಕ ಹಾಗೂ ಮುಕ್ತವಾಗಿ ಚುನಾವಣೆ ನಡೆಯಬೇಕಾಗಿರುವುದರಿಂದ ಜಿಲ್ಲೆಯಾದ್ಯಂತ ಕಣ್ಗಾವಲು ಸಮಿತಿ ರಚಿಸಬೇಕು. ಹಣ ಮತ್ತು ಹೆಂಡ ಹಂಚಿ ಮತ ಕೊಂಡುಕೊಳ್ಳಲು ಹೊರಟಿರುವುದನ್ನು ತಡೆಯಬೇಕೆಂದು ಆಗ್ರಹಿಸಿದರು.
ಸೈಯದ್ ವಲಿಖಾದ್ರಿ, ನ್ಯಾಯವಾದಿ ರವೀಂದ್ರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.