ಸಿದ್ದರಾಮಯ್ಯ ಭಂಡತನಕ್ಕೆ ಬಿದ್ದಿದ್ದಾರೆ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕಿತ್ತು. ಆದರೆ ಭಂಡತನಕ್ಕೆ ಬಿದ್ದಿದ್ದಾರೆಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಲೇವಡಿ ಮಾಡಿದರು.
ಮಾಳಪ್ಪನಹಟ್ಟಿ ಸಮೀಪವಿರುತ ತಿರುಮಲ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಬಿಜೆಪಿ. ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಏಳು ಶಾಸಕರು, ಇಬ್ಬರು ಮಂತ್ರಿಗಳಿರುವುದರಿಂದ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆಂಬ ಭ್ರಮೆಯಲ್ಲಿದ್ದರು. ಆದರೆ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ನಿಷ್ಟೆಯಿಂದ ಕೆಲಸ ಮಾಡಿದ ಪರಿಣಾಮ ಗೋವಿಂದ ಕಾರಜೋಳರವರ ಗೆಲುವು ಸುಲಭವಾಯಿತು.
ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಬ್ಯಾಂಕ್‌ಗೆ ಹಣ ವರ್ಗಾವಣೆಯಾದ ದಿನದಂದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಲ ತೆಗೆದುಕೊಂಡಿರುವುದು ಇತಿಹಾಸ. ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ.ಖಾದರ್ ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಕುರಿತು ಚರ್ಚಿಸಲು ಅವಕಾಶ ಕೊಟ್ಟರು. ಅದೇ ಮುಡಾದಲ್ಲಿ ನಡೆದಿರುವ ನಿವೇಶನಗಳ ಹಗರಣಕ್ಕೆ ಅವಕಾಶ ಕೊಡಲಿಲ್ಲ. ಏಕೆಂದರೆ ಮುಖ್ಯಮಂತ್ರಿ ಉತ್ತರ ಕೊಡುವುದು ಕಷ್ಟವಾಗುತ್ತದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದರೂ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಗಟ್ಟಿಯಾಗಿ ನಿಂತು ಕೆಲಸ ಮಾಡಿದ ಫಲವಾಗಿ ಗೋವಿಂದ ಕಾರಜೋಳರವರು ಗೆಲ್ಲಲು ಸಾಧ್ಯವಾಯಿತು.
ಸಾಕಷ್ಟು ವಿರೋಧದ ನಡುವೆಯೇ ಕಟ್ಟ ಕಡೆಯ ಬೂತ್‌ನಲ್ಲಿ ಕಾರ್ಯಕರ್ತರು ಶಕ್ತಿ ಪ್ರದರ್ಶಿಸುವ ಜಾಣ್ಮೆ ತೋರಿದ್ದು, ನಿಜಕ್ಕೂ ಸಂತೋಷದ ಸಂಗತಿ. ಚುನಾವಣೆ ಪೂರ್ವದಲ್ಲಿ ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗ್ಯಾರೆಂಟಿಗಳನ್ನು ನೀಡಲು ಆಗುತ್ತಿಲ್ಲ. ಅದಕ್ಕಾಗಿ ಮೂರು ತಿಂಗಳಿಗೊಮ್ಮೆ ಹೊಸ ಸಾಲ ಎತ್ತುವ ಉಪಾಯ ಮಾಡುತ್ತ ರಾಜ್ಯವನ್ನು ದಿವಾಳಿಯಾಗಿಸುತ್ತಿದ್ದಾರೆಂದು ಟೀಕಿಸಿದರು.
ಇನ್ನು ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆ ಎದುರಾಗಲಿದೆ. ಪಕ್ಷದ ಕಾರ್ಯಕರ್ತರಿಗೆ ಇದು ಅಗ್ನಿಪರೀಕ್ಷೆಯಾಗಿದ್ದು, ಚುನಾವಣೆಯನ್ನು ಎದುರಿಸಲು ಕಾರ್ಯಕರ್ತರೆ ಅಭ್ಯರ್ಥಿಗಳಾಗಿ ಈಗಿನಿಂದಲೆ ಸಿದ್ದತೆಯಾಗಬೇಕೆಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಉಚಿತ ಗ್ಯಾರೆಂಟಿಗಳ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಾರೆಂಟಿ ಮುಗಿದಿದೆ. ದಲಿತರಿಗೆ, ರೈತರಿಗೆ ದ್ರೋಹವೆಸಗುತ್ತಿರುವ ಭ್ರಷ್ಠ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯಬೇಕಾಗಿರುವುದರಿಂದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಮತಗಳನ್ನು ಹೆಚ್ಚಿಸಬೇಕಿದೆ. ಯಾವ ವರ್ಗಕ್ಕೆ ಅನ್ಯಾಯವಾಗಿದೆಯೋ ಅಂತಹವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಮುಡಾ ಹಗರಣದಲ್ಲಿ ಸಿಲುಕಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಆ.೩ ರಂದು ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ಪಾದಯಾತ್ರೆಯಲ್ಲಿ ಜಿಲ್ಲೆಯಿಂದ ಒಂದು ಸಾವಿರ ಮಂದಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಸರ್ಕಾರದ ಆಯಸ್ಸು ಮುಗಿಯುತ್ತ ಬಂದಿದೆ. ಹೋರಾಟದ ಕಿಚ್ಚು ಇಲ್ಲದಿದ್ದರೆ ಪಕ್ಷ ಗಟ್ಟಿಯಾಗಲು ಸಾಧ್ಯವಿಲ್ಲ. ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ೧೮೭ ಕೋಟಿ ರೂ.ಗಳ ಹಗರಣವನ್ನು ಪ್ರತಿ ಗ್ರಾಮ ಮಟ್ಟಕ್ಕೆ ಮುಟ್ಟಿಸಿ ಜನರ ಮನಃ ಪರಿವರ್ತನೆ ಮಾಡುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದೆಗುಂದಬಾರದು. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲೇಬೇಕು. ಪ್ರತಿ ತಾಲ್ಲೂಕಿನಿಂದಲೂ ಜನರನ್ನು ಕರೆತರುವ ಕೆಲಸ ಮಾಡಬೇಕೆಂದು ಕಾರ್ಯಕರ್ತರುಗಳಿಗೆ ಎ.ಮುರಳಿ ತಾಕೀತು ಮಾಡಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿರಾಜು ಮಾತನಾಡಿ ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ.ಗಳನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ. ರಾಜ್ಯಾಧ್ಯಕ್ಷ ವಿಜಯೇಂದ್ರರವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆ ಯಶಸ್ವಿಯಾಗಬೇಕಾದರೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಉಚಿತ ಗ್ಯಾರೆಂಟಿಗಳನ್ನು ನೀಡಲು ಆಗದ ರಾಜ್ಯ ಸರ್ಕಾರ ಭ್ರಷ್ಠಾಚಾರದಲ್ಲಿ ಮುಳುಗಿದೆ. ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದು ಹೇಳಿದರು.
ಬಿಜೆಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್ ಸಿದ್ದಾಪುರ, ಸಂಪತ್‌ಕುಮಾರ್, ಬಾಳೆಕಾಯಿ ರಾಂದಾಸ್ ಇವರುಗಳು ವೇದಿಕೆಯಲ್ಲಿದ್ದರು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಮಂಡಲ ಪದಾಧಿಕಾರಿಗಳು ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದರು.