ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆಯ ಪ್ರತೀಕ : ಸಚಿವ ಡಿ.ಸುಧಾಕರ್ ಬಣ್ಣನೆ
ಚಿತ್ರದುರ್ಗ. ಅ.2: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರು ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆ ಮೌಲ್ಯಗಳ ಪ್ರತೀಕವಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಅಕ್ಟೋಬರ್ 02 ಈ ಮಹನೀಯರು ಜನಿಸಿದ ಸುದಿನವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಣ್ಣಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವಾದರ್ಶಗಳು ಒಂದೇ ರೀತಿಯಾಗಿದ್ದು, ನಮಗೆಲ್ಲರಿಗೂ ಆದರ್ಶಪ್ರಾಯವಾಗಿವೆ. ತಾವು ಪ್ರತಿಪಾದಿಸಿದ ಆದರ್ಶಗಳಂತೆ ಬದುಕಿದ ಈ ಇಬ್ಬರೂ ಮಹನೀಯರು ಜನಸಾಮಾನ್ಯರು ಹಾಗೂ ದೇಶದ ಒಳಿತಿಗಾಗಿ ಶ್ರಮಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು. ಈರ್ವರೂ ಮಹನೀಯರ ವಯಸ್ಸಿನ ಅಂತರ ಸುಮಾರು 35 ವರ್ಷಗಳಾಗಿದ್ದು, ಗಾಂಧೀಜಿ ಪ್ರತಿಪಾದಿಸಿದ ಅಹಿಂಸೆ ಹಾಗೂ ಸತ್ಯದ ತತ್ವಗಳನ್ನು ಶಾಸ್ತ್ರೀಜಿಯವರೂ ಸಹ ತಮ್ಮ ಜೀವನದುದ್ದಕ್ಕೂ ಅನುಸರಿಸಿದರು. ಇಬ್ಬರು ಮಹನೀಯರು ದೇಶದ ರಾಜಕೀಯ ಸ್ವಾತಂತ್ರ್ಯ, ಆರ್ಥಿಕ, ಸಾಮಾಜಿಕ ಹಾಗೂ ಸವಾರ್ಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದರು ಎಂದು ಸಚಿವ ಡಿ.ಸುಧಾಕರ್ ಹೇಳಿದರು.
“ಸ್ವಾತಂತ್ರ್ಯಕ್ಕಿಂತ ನೈರ್ಮಲ್ಯವು ಮುಖ್ಯವಾಗಿದೆ” ಎಂದು ಹೇಳಿದ ಗಾಂಧೀಜಿ ಸ್ವಚ್ಛತೆಗೆ ಆದ್ಯತೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ಜೊತೆಗೆ ಜನರು ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆಯನ್ನು ಮೈಗೂಡಿಸಿಕೊಳ್ಳವಂತೆ ಕರೆ ನೀಡಿದರು. ಗಾಂಧೀಜಿಯವರ ಚಿಂತನೆ, ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ. ಜಿಲ್ಲಾಡಳಿತದಿಂದ ಇಲ್ಲಿ ನಿರಂತರವಾಗಿ ಸಾಹಿತ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಯೋಜಿಸಲಾಗಿದೆ. ಜಯಂತಿಯ ಈ ಶುಭ ದಿನದಂದು ನ್ಯಾಯಯುತ, ಶಾಂತಿಯುತ ಮತ್ತು ಸುಸ್ಥಿರ ಜಗತ್ತಿಗೆ ನಾವು ಹೇಗೆ ಕೊಡುಗೆ ನೀಡಬಹುದು ಎಂಬುದರ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.
ನಾವೆಲ್ಲರು ಜೀವನದಲ್ಲಿ ಸತ್ಯ, ಅಹಿಂಸೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಹಾಗೂ ವೈಯುಕ್ತಿಕ ಮತ್ತು ಸಾರ್ವಜನಿಕ ಜೀವನದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಕುರಿತು ಪ್ರತಿಜ್ಞೆ ಮಾಡಿ ಅದರಂತೆ ಬದುಕನ್ನು ರೂಪಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಸತ್ಯವನ್ನು ಎತ್ತಿ ಹಿಡಿಯುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಪರಿಪಾಲಿಸುವಲ್ಲಿ ಸದಾ ಗಾಂಧೀಜಿಯವರ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಾ ಬಂದಿದೆ. ದೇಶದ ಜನತೆಗೆ “ನನ್ನ ಜೀವನವೇ ನನ್ನ ಸಂದೇಶ” ಎಂದು ತಿಳಿಸಿದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಮತ್ತು “ಜೈ ಜವಾನ್ ಜೈ ಕಿಸಾನ್” ಎಂದು ಘೋಷಣೆ ನೀಡಿದ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಸಚಿವ ಡಿ.ಸುಧಾಕರ್ ಕರೆ ನೀಡಿದರು.
ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಕುರಿತು ಉಪನ್ಯಾಸ ನೀಡಿದ ಸಾಹಿತಿ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರುಳಿ ಎಂ.ಬಸವರಾಜ್, ಮಹಾತ್ಮಾ ಗಾಂಧೀಜಿಯವರು ಸತ್ಯ ಮತ್ತು ಅಹಿಂಸೆಯ ನೇತಾರರಾಗಿ ಈ ಎರಡು ಅಸ್ತ್ರಗಳ ಮೂಲಕ ಸಮಾಜದ ಅಂಕುಡೊಂಕುಗಳು, ಬ್ರಿಟೀಷರ ದಬ್ಬಾಳಿಕೆಯನ್ನು, ಉಳ್ಳವರ ಕಿರುಕುಳ ತಪ್ಪಿಸಿ, ಸಮ ಸಮಾಜಕಟ್ಟುವಲ್ಲಿ ಮಹತ್ತರವಾದ ಕಾರ್ಯ ಮಾಡಿದ್ದಾರೆ. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರು ಚಿಂತನೆಗಳು ಸರ್ವಕಾಲಿಕವಾಗಿವೆ. ಇಂತಹ ಮಹಾನ್ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ ಓದುವ ಮೂಲಕ ನಮ್ಮ ಬದುಕು ಕಟ್ಟಿಕೊಳ್ಳೊಣ ಎಂದು ಹೇಳಿದರು.
ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಆಯುಷ್ ಕಿಟ್ ವಿತರಣೆ ಮಾಡಲಾಯಿತು. ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಅಂಗವಾಗಿ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಅಭಿಯಾನದಡಿ ಸ್ವಚ್ಛತೆ, ನೈರ್ಮಲ್ಯ ಹಾಗೂ ಐಇಸಿ ಹಾಗೂ ವಿವಿಧ 08 ವಿಭಾಗಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ನಡುವೆ ಏರ್ಪಡಿಸಿದ ಸ್ಪರ್ಧೆಯಲ್ಲಿ ಚಿತ್ರದುರ್ಗ ನಗರಸಭೆಗೆ 07 ಪ್ರಶಸ್ತಿ ಲಭಿಸಿದ್ದು, ಅತ್ಯುತ್ತಮ ಸಾಧನೆ ತೋರಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಪೌರಕಾರ್ಮಿಕರಿಗೆ ಪ್ರಶಸ್ತಿ ಹಾಗೂ ಸ್ಮರಣಿಕೆ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಸಂತಜೋಸೆಫ್ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಮಾಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕೆ.ಡಿ.ಪಿ ಸದಸ್ಯ ನಾಗರಾಜು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಓ ಎಸ್.ಜೆ.ಸೋಮಶೇಕರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ತಹಸಿಲ್ದಾರ್ ನಾಗವೇಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಭಾರ್ಗವಿ ಹಾಗೂ ಸಂತ ಜೋಸೆಫ್ ಕಾನ್ವೆಂಟ್ ಶಾಲಾ ಮಕ್ಕಳ ತಂಡದಿಂದ ಗಾಂಧೀಜಿಯವರಿಗೆ ಪ್ರಿಯವಾದ ಗೀತ ಗಾಯನ ಪ್ರಸ್ತುತಪಡಿಸಲಾಯಿತು. ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಅವರು ಇದೇ ವೇಳೆ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಸ್ವಚ್ಛತಾ ನಡಿಗೆಗೆ ಚಾಲನೆ : ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮುಂಭಾಗದಿಂದ “ಸ್ವಚ್ಛತಾ ನಡಿಗೆ” ಕಾರ್ಯಕ್ರಮಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ನಡಿಗೆ ಕಾರ್ಯಕ್ರಮಕ್ಕೆ ಮುನ್ನ ನಗರದ ನೀಲಕಂಠೇಶ್ವರ ದೇಗುಲದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು, ನಂತರ ಸಚಿವರು ಕೂಡ ಕಾಲ್ನಡಿಗೆಯಲ್ಲಿ ಪಾಲ್ಗೊಂಡು ಗಾಂಧಿ ವೃತ್ತ, ಎಸ್‍ಬಿಎಂ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆವರೆಗೆ ಸ್ವಚ್ಛತಾ ನಡಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಜಾಗೃತಿ ಫಲಕಗಳನ್ನು ಪ್ರದರ್ಶಿಸಲಾಯಿತು. ಬಳಿಕ ಎಲ್ಲ ಗಣ್ಯರಿಂದ ಒನಕೆ ಓಬವ್ವ ವೃತ್ತ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್., ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.