ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗೋವಿಂದ ಕಾರಜೋಳ ಅವರ ಸಂಪೂರ್ಣ ಮಾಹಿತಿ ಇಲ್ಲಿದೆ...!
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಕೋಟೆನಾಡಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸ್ಪರ್ಧಿಯ ನಡುವೆ ತೀವ್ರ ಹಣಾಹಣಿ ಏರ್ಪಡಲಿದೆ. ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಕಡೆಗೂ ಟಿಕೆಟ್ ಘೋಷಣೆ ಮಾಡಿದೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳಗೆ ಬಿಜೆಪಿ ಟಿಕೆಟ್ ಅಂತಿಮವಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಈಗಾಗಲೇ ಒಮ್ಮೆ ಗೆದ್ದು, ಮತ್ತೊಮ್ಮೆ ಸೋತಿರುವ ಬಿಎನ್ ಚಂದ್ರಪ್ಪ ಅವರಿಗೇನೆ ಕಾಂಗ್ರೆಸ್ ಈ ಬಾರಿಯೂ ಟಿಕೆಟ್ ಘೋಷಣೆ ಮಾಡಿದೆ. ಈ ಬಾರಿಯ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ ಚಂದ್ರಪ್ಪ. ಈಗ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಗೋವಿಂದ ಕಾರಜೋಳ ಇದೆ ಮೊದಲ ಬಾರಿಗೆ ಸಂಸದ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ.
ಹಾಗಾದರೆ ಕಾಂಗ್ರೆಸ್ ಸ್ಪರ್ಧಿ ಎದುರು ಗೆದ್ದೆ ಗೆಲ್ಲುವ ವಿಶ್ವಾಸದೊಂದಿಗೆ ಟಿಕೆಟ್ ಪಡೆದಿರುವ ಗೋವಿಂದ ಕಾರಜೋಳ ಹಿನ್ನೆಲೆಯನ್ನು ನೋಡುವುದಾದರೆ, ಗೋವಿಂದ ಕಾರಜೋಳ 1951, ಜನವರಿ 25ರಂದು ಜನಿಸಿದರು. (73ವರ್ಷ) ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ದಲಿತ ಎಡಗೈ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಇವರ ಪೂರ್ಣ ಹೆಸರು ಗೋವಿಂದ ಮುಕ್ತಪ್ಪ ಕಾರಜೋಳ.
ಇವರು ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಅನುಭವ ಹೊಂದಿದ್ದು, ಹಿರಿಯ ರಾಜಕಾರಣಿಯಾಗಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯ ಘಟಕದ ಕೋರ್ ಕಮಿಟಿ ಸದಸ್ಯರಾಗಿರುವ ಕಾರಜೋಳ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.
ಮೊದಲ ಬಾರಿಗೆ 1994ರಲ್ಲಿ ಜನತಾದಳ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಪದಾರ್ಪಣೆ ಮಾಡುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. 1999ರ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 52,658 ಮತ ಪಡೆದು ಸೋಲು ಕಂಡಿದ್ದರು. 2004ರಲ್ಲಿ ಬಿಜೆಪಿ ಸೇರ್ಪಡೆಯಾದರು. 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.ಆಗ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 2006 ಮತ್ತು 2007ರಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾಗಿ ಆಡಳಿತ ನಡೆಸಿದ್ದಾರೆ. 2008ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸಣ್ಣ ಕೈಗಾರಿಕೆ ಸಚಿವರಾಗಿದ್ದರು. 2018ರಲ್ಲಿ 64,727 ಮತ ಪಡೆಯುವ ಮೂಲಕ ಮತ್ತೆ ಶಾಸಕರಾದರು. 2019ರ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಉಪಮುಖ್ಯಮಂತ್ರಿಯಾಗಿದ್ದರು. ನಂತರ 2023ರಲ್ಲಿ ನಡೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.