ಶಾಲೆಯಿಂದ ಹೊರಗುಳಿದ ಬಾಲಕಿಯರ ಗುರುತಿಸಿ, ಮುಖ್ಯವಾಹಿನಿಗೆ ತನ್ನಿ : ಸಚಿವ ಡಿ.ಸುಧಾಕರ್
ಚಿತ್ರದುರ್ಗ. ಜೂನ್.26: ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಬಾಲಕಿಯರ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ ಬಾಲಕಿಯರನ್ನು ಮುಖ್ಯವಾಹಿನಿಗೆ ತರಲು ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಆರು ತಾಲ್ಲೂಕುಗಳ ಅಂಗನವಾಡಿಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಶಿಕ್ಷಣ ಇಲಾಖೆಯಿಂದ ಶಾಲೆಯಿಂದ ಹೊರಗುಳಿದ ಬಾಲಕಿಯರ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ ಬಾಲಕಿಯರನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮಿಸಬೇಕು. ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂಗನವಾಡಿಗಳಿಗೆ, ಸೂಪರ್‍ವೈಸರ್‍ಗಳಿಗೆ ಜವಾಬ್ದಾರಿ ನಿಗದಿ ಮಾಡಬೇಕು ಎಂದು ಹೇಳಿದರು.
ಅಂಗನವಾಡಿಗಳಿಗೆ ಸರಬರಾಜು ಆಗುವ ಆಹಾರ ಸಾಮಾಗ್ರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ದೂರುಗಳು ಕೇಳಿ ಬರುತ್ತಿವೆ. ಕಳಪೆ ಆಹಾರ ಸಾಮಾಗ್ರಿ ಸರಬರಾಜು ಮಾಡಿದವರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 193 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 102 ತಡೆಯಲಾಗಿದ್ದು, 91 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ. 11 ರಿಂದ 18 ವರ್ಷದ 154 ಶಾಲೆಯಿಂದ ಹೊರಗುಳಿದ ಹೆಣ್ಣು ಮಕ್ಕಳನ್ನು ಗುರುತಿಸಿ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಕಾನೂನಿನನ್ವಯ ಬಾಲ್ಯ ವಿವಾಹಕ್ಕೆ ಕಾರಣಕರ್ತರಾಗುವ ಪುರೋಹಿತರು, ಕಲ್ಯಾಣ ಮಂಟಪದವರು, ಕೆಟರಿಂಗ್, ಶಾಮಿಯಾನ ಸೇರಿದಂತೆ, ಪಾಲ್ಗೊಂಡ ಎಲ್ಲರ ಮೇಲೂ ಮೊಕದ್ದಮೆ ದಾಖಲಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ. ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.