ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕ್ಯಾತಗೊಂಡನಹಳ್ಳಿ ಗ್ರಾಮದ ಹತ್ತು ಅಂಗಡಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟವಾಗುತ್ತಿರುವುದರಿಂದ ಚಿಕ್ಕವರಿಂದ ಹಿಡಿದು ದೊಡ್ಡವರತನಕ ದಿನವೂ ಮದ್ಯ ಸೇವಿಸಿ ಗಲಾಟೆ ಮಾಡುವುದರಿಂದ ಗ್ರಾಮದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ದಿನವಿಡಿ ಕೂಲಿ ಮಾಡಿ ಬರುವ ಹಣದಿಂದ ಗಂಡಸರು ಮದ್ಯ ಸೇವಿಸಿ ರಾತ್ರಿ ವೇಳೆಯಲ್ಲಿ ಮನೆಯಲ್ಲಿ ಹೆಂಡತಿ ಮಕ್ಕಳ ಮೇಲೆ ಹಲ್ಲೆ ನಡೆಸುವುದು ಸರ್ವೆ ಸಾಮಾನ್ಯವಾಗಿಬಿಟ್ಟಿದೆ.
ಈ ಸಂಬಂಧ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇದುವರೆವಿಗೂ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ಮದ್ಯ ಮಾರಾಟ ತಡೆಗಟ್ಟಿ ಗ್ರಾಮದಲ್ಲಿ ನೆಮ್ಮದಿ ನೆಲೆಸುವಂತೆ ಮಾಡಿ ಎಂದು ಮಹಿಳೆಯರು ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.
ಕೃಷ್ಣಮೂರ್ತಿ, ಡಿಂಗ್ರಿನಾಗರಾಜ್, ಪುಟ್ಟಕ್ಕ, ಶಿವಮ್ಮ, ರಮೇಶ್, ತಿಪ್ಪಮ್ಮ, ಶಿಲ್ಪ, ಮಲ್ಲಮ್ಮ, ಸುಮಲತ, ರೈತ ಮುಖಂಡ ಕೆ.ಪಿ.ಭೂತಯ್ಯ, ಶಿವಕುಮಾರ್, ರಾಜಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.