For the best experience, open
https://m.suddione.com
on your mobile browser.
Advertisement

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ | ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

03:25 PM Mar 18, 2024 IST | suddionenews
ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ   ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ   ಜಿಲ್ಲಾಧಿಕಾರಿ ಟಿ ವೆಂಕಟೇಶ್ ಸೂಚನೆ
Advertisement

Advertisement
Advertisement

Advertisement

ಚಿತ್ರದುರ್ಗ. ಮಾ.18:  ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಬರ ಹಾಗೂ ಬಿಸಿಲು ಹೆಚ್ಚಿರುವ ಕಾರಣ ಭಕ್ತಾಧಿಕಾಗಳಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ದೇವಸ್ಥಾನದ 2024ನೇ ಸಾಲಿನ ಜಾತ್ರೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 19 ರಿಂದ ಏಪ್ರಿಲ್ 1 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 26ರಂದು ದೊಡ್ಡ ರಥೋತ್ಸವ ನಡೆಯಲಿದೆ. ರಥೋತ್ಸವದ ಸಂದರ್ಭದಲ್ಲಿ ರಥ ಸಾಗಲು ಯಾವುದೇ ಅಡಚಣೆಯಾಗದಂತೆ ಕ್ರಮವಹಿಸಬೇಕು. ಈ ಹಿನ್ನಲೆಯಲ್ಲಿ ತೇರು ಬೀದಿಗಳಲ್ಲಿ ರಥೋತ್ಸವ ಜರುಗುವವರೆಗೆ ಯಾವುದೇ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ನಾಯಕನಹಟ್ಟಿ ಜಾತ್ರೆಗೆ ಆಗಮಿಸವ ಭಕ್ತಾಧಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಅಗತ್ಯ ಕ್ರಮವಹಿಸಲಾಗಿದೆ. ಜಾತ್ರಾ ಅಂಗವಾಗಿ ಪೌರಕಾರ್ಮಿಕರನ್ನು ಹಾಗೂ ಮೇಲ್ವಿಚಾರಕರನ್ನೂ ನಿಯೋಜನೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಚಳ್ಳಕೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶೀ ಮಾತನಾಡಿ, ಜಾತ್ರೆಯಲ್ಲಿ ತಾತ್ಕಾಲಿಕವಾಗಿ ನಾಲ್ಕು ಕಡೆ ಪ್ರಥಮ ಚಿಕಿತ್ಸೆ ಕೇಂದ್ರಗಳನ್ನು ತೆರೆಯಲಾಗುವುದು. ತುರ್ತು ಚಿಕಿತ್ಸೆಗಾಗಿ ನಾಲ್ಕು ಅಂಬುಲೆನ್ಸ್ ನಿಯೋಜನೆ ಮಾಡಿಕೊಳ್ಳಲಾಗುವುದು. 20 ಮಂದಿ ವೈದ್ಯಾಧಿಕಾರಿಗಳು ಸೇರಿದಂತೆ 160 ಮಂದಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅಗತ್ಯ ಔಷಧೋಪಚಾರಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಕುಡಿಯುವ ನೀರಿನ ಪರೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಪ್ರಯುಕ್ತ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಾತ್ರೆಯ ಸಿದ್ಧತೆಯನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು. ಜಾತ್ರೆಯ ಸಂದರ್ಭದಲ್ಲಿ ಚುನಾವಣಾ ಪ್ರಚಾರದ ಯಾವುದೇ ರೀತಿಯ ಕಾರ್ಯಚಟುವಟಿಕೆಗಳು ನಡೆಸಬಾರದು. ಈ ಕುರಿತು ಹೆಚ್ಚಿನ ಗಮನಹರಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾದರೆ ತಕ್ಷಣವೇ ಪ್ರಕರಣ ದಾಖಲು ಮಾಡಬೇಕು ಎಂದು ತಾಕೀತು ಮಾಡಿದರು.

ರಕ್ಷಣೆ ಹಾಗೂ ಬಂದೋಬಸ್ತ್ ಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮವಹಿಸಬೇಕು. ಜಾತ್ರಾ ಸಂದರ್ಭದಲ್ಲಿ ಬ್ಯಾರಿಕೇಡ್ ಮತ್ತು ಸಲಹಾ ಕೌಂಟರ್‍ಗಳನ್ನು ಅಗತ್ಯ ಇರುವ ಕಡೆ ವಾಚ್ ಟವರ್‍ಗಳ ವ್ಯವಸ್ಥೆ ಕಲ್ಪಿಸಿಕೊಂಡು ಮತ್ತು ತಾತ್ಕಾಲಿಕವಾಗಿ ಸಿ.ಸಿ.ಕ್ಯಾಮರಾಗಳನ್ನು ಅಗತ್ಯ ಇರುವ ಕಡೆ ಅಳವಡಿಸಿಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಜಾತ್ರೆಗೆ ವಿವಿಧ ಮಾರ್ಗಗಳಿಂದ ಬರುವ ಮಾರ್ಗಗಳಲ್ಲಿ 7 ಕಡೆ ಚೆಕ್‍ಪೋಸ್ಟ್ ನಿರ್ಮಿಸಿ ಪ್ರಾಣಿಬಲಿ ನಿಷೇಧವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಾತ್ರೆಯ ಅಂಗವಾಗಿ ಹಾಗೂ ಬೇಸಿಗೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಇರುವ ಅಗ್ನಿಶಾಮಕ ವಾಹನಗಳ ಸೌಲಭ್ಯ ಹಾಗೂ ಅಗ್ನಿ ಅವಘಡಗಳನ್ನು ತಡೆಯಲು ನುರಿತ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳುವಂತೆ ಅಗ್ನಿಶಾಮಕ ಠಾಣಾಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ, ಕೆಎಸ್‍ಆರ್‍ಟಿಸಿ ವಿಭಾಗೀಯ ಅಧಿಕಾರಿ ಸಿದ್ದೇಶ್ವರ್ ಹೆಬ್ಬಾಳ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Advertisement
Tags :
Advertisement