ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದು 3 ಅಲ್ಲ 5 ಅಸ್ಥಿಪಂಜರ
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.29 : ನಿನ್ನೆ ರಾತ್ರಿ ನಗರದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಪಾಳುಬಿದ್ದ ಮನೆಯೊಂದರಲ್ಲಿ ಮೂವರು ವ್ಯಕ್ತಿಗಳ ಅಸ್ಥಿಪಂಜರ ಪತ್ತೆಯಾಗಿದ್ದವು. ಆದರೆ ಇಂದು ಬೆಳಿಗ್ಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಆ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಂಬಂಧಿ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ
ಸ್ಥಳೀಯರು ನೀಡಿದ ಮಾಹಿತಿಯನ್ನು ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಇಂದು (ಶುಕ್ರವಾರ) ಪರಿಶೀಲನೆ ನಡೆಸಿದಾಗ 5 ಅಸ್ಥಿಪಂಜರಗಳು ಪತ್ತೆಯಾಗಿವೆ. ಅವರನ್ನು
ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ಎಂದು ಗುರುತಿಸಲಾಗಿದ್ದು, ಅವರೆಲ್ಲರೂ ಈ ಮನೆಯಲ್ಲಿಯೇ ವಾಸವಾಗಿದ್ದರು ಎಂದು ತಿಳಿಸಿದ್ದಾರೆ.
ಅಸ್ಥಿಪಂಜರ ಕಂಡು ಮನೆಯಲ್ಲಿ ಇದ್ದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವಾ ಕೊಲೆಯಾಗಿದ್ದಾರೆಯೇ? ಎಂಬುವುದರ ಪೊಲೀಸರ ತನಿಖೆ ಮಾಡಿದ ನಂತರ ತಿಳಿಯಬೇಕಿದೆ. ಪೊಲೀಸರು ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೊಳಪಡಿಸಿದ ಮೇಲಷ್ಟೇ ಸಂಪೂರ್ಣ ಮಾಹಿತಿ ಹೊರಬರಲಿದೆ.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಪವನ್ ಕುಮಾರ್ ಜಗನ್ನಾಥರೆಡ್ಡಿ (80) ನಿವೃತ್ತ ಇಂಜಿನಿಯರ್ ಆಗಿದ್ದರು. ಅವರು ಹಲವಾರು ವರ್ಷಗಳಿಂದ ನಮ್ಮ ಸಂಪರ್ಕದಲ್ಲಿರಲಿಲ್ಲ. ಇದೀಗ ಪತ್ತೆಯಾಗಿರುವ ಅಸ್ಥಿಪಂಜರ ಅವರದ್ದೇ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್, ಪಿಎಸ್ಐ ರಘು ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.