Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಧಿಕಾರಿಗಳಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆ ಇರಬೇಕು : ಅಮ್ಲಾನ್ ಆದಿತ್ಯ ಬಿಸ್ವಾಸ್

07:07 PM Nov 30, 2023 IST | suddionenews
Advertisement

ಚಿತ್ರದುರ್ಗ. ನ.30 :  ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  

Advertisement

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಅಧಿಕಾರಿಗಳು ಸರ್ಕಾರಿ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವಲ್ಲಿ ನಿಷ್ಕಾಳಜಿ, ನಿರ್ಲಕ್ಷ್ಯ ತೋರುವುದನ್ನು ಸಹಿಸುವುದಿಲ್ಲ.  ಅಧಿಕಾರಿಗಳಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆ ಇರಬೇಕು ಎಂದು ಹೇಳಿದರು.

Advertisement

ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಇದೆ. ಹಾಗಾಗಿ ಪ್ರತಿಯೊಬ್ಬರಿಗೂ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಾರಿಯಾಗಿರುವ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ವಿಳಂಬ ಸಲ್ಲದು ಎಂದು ಹೇಳಿದರು.

ಕಾಮಗಾರಿ ವಿಳಂಬಕ್ಕೆ ನೋಟಿಸ್ ಜಾರಿ ಮಾಡಿ:  ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸದ ಕಂಟ್ರ್ಯಾಕ್ಟರ್‍ಗಳಿಗೆ ದಂಡ ವಿಧಿಸುವ ಜೊತೆಗೆ ನೋಟಿಸ್ ಜಾರಿಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಗೆ ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯ ಕಾರ್ಯಾದೇಶ ಹಾಗೂ ಭೌತಿಕ ಅನುಷ್ಠಾನದಲ್ಲಿ ಬಹಳಷ್ಟು ವ್ಯತ್ಯಾಸ ಕಂಡುಬರುತ್ತಿದೆ. ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಮುಗಿಸದಿದ್ದರೆ ಶಿಸ್ತು ಕ್ರಮ ಜರುಗಿಸಬೇಕು. ಆದರೆ ಕೆಲಸದಲ್ಲಿ ನಿಯಮ ಉಲ್ಲಂಘನೆಯಾಗದಂತೆ ಅಗತ್ಯ ಕ್ರಮವಹಿಸಬೇಕು. ಕಾಮಗಾರಿ ಗುಣಮಟ್ಟ ಹಾಗೂ ಪ್ರಗತಿ ಕುರಿತು ಹೆಚ್ಚಿನ ನಿಗಾವಹಿಸಬೇಕು ಎಂದು ತಾಕೀತು ಮಾಡಿದರು.

ಮಕ್ಕಳಿಗೆ ಗುಣಮಟ್ಟದ ಬಿಸಿಯೂಟ ನೀಡಿ: ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಪೋಷಕಾಂಶ ಭರಿತ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ಅಕ್ಷರದಾಸೋಹ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದರು.

“ಮಕ್ಕಳಿಗೆ ಉತ್ತಮಗುಣಮಟ್ಟದ ಊಟ ಕೊಡ್ತಿರಾ, ತಾಜಾ ತರಕಾರಿ ಬಳಸಬೇಕು. ನೀವು ಊಟ ಟೆಸ್ಟ್ ಮಾಡ್ತಿರಾ ಎಂದು ಪ್ರಶ್ನಿಸಿದ ಅವರು, ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ಪೌಷ್ಠಿಕ ಆಹಾರ ನೀಡಬೇಕು. ಊಟದ ಗುಣಮಟ್ಟ ಪರಿಶೀಲನೆಗೆ ಬಿಇಒಗಳ ತಂಡ ರಚನೆ ಮಾಡಿ, ಅನಿರೀಕ್ಷಿತವಾಗಿ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಬೇಕು ಎಂದು ತಾಕೀತು ಮಾಡಿದರು.

ಅಂಧತ್ವ ನಿವಾರಣೆ ಶಸ್ತ್ರಚಿಕಿತ್ಸೆಗೆ ಶಿಬಿರ ನಡೆಸಿ:  ಅಂಧತ್ವ ನಿವಾರಣಾ ಕಾರ್ಯಕ್ರಮದಡಿಯಲ್ಲಿ ಶಿಬಿರಗಳನ್ನು ಆಯೋಜಿಸುವ ಮೂಲಕ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ನಡೆಸಬೇಕು ಎಂದು ಡಿಹೆಚ್‍ಓಗೆ ಸೂಚನೆ ನೀಡಿದರು.

ಅಂಧತ್ವ ನಿವಾರಣಾ ಕಾರ್ಯಕ್ರಮದಡಿಯಲ್ಲಿ ಅಂಧತ್ವ ನಿವಾರಣೆ ಕೈಗೊಂಡ ಶಸ್ತ್ರಚಿಕಿತ್ಸೆಯಲ್ಲಿ ಖಾಸಗಿ ವೈದ್ಯರ ಸಹಯೋಗದಲ್ಲಿ ಶೇ.70 ರಷ್ಟು ಪ್ರಗತಿ ಸಾಧಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲಾ ಆಸ್ಪತ್ರೆಯಲ್ಲಿಯೇ ಇಬ್ಬರು ನೇತ್ರ ತಜ್ಞರಿದ್ದು, ಹೆಚ್ಚು ಹೆಚ್ಚು ಶಿಬಿರಗಳನ್ನು ಆಯೋಜಿಸುವ ಮೂಲಕ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ನಡೆಸಬೇಕು.

ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು, ಶುಶ್ರೂಷಕರು ಸೇರಿದಂತೆ ಅಗತ್ಯ ಸಿಬ್ಬಂದಿ ಹಾಗೂ ಸಾಧನ ಸಲಕರಣೆಗಳು ಇದ್ದರೂ ಸರಿಯಾದ ಆರೋಗ್ಯ ಸೇವೆ ನೀಡುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕಣ್ಣಿನಪೊರೆ ಶಸ್ತ್ರಚಿಕಿತ್ಸೆಗೆ ಕನಿಷ್ಟವೆಂದರೂ 50 ಸಾವಿರ ರೂ. ಖರ್ಚಾಗುತ್ತದೆ.  ಬಡವರು ಇಷ್ಟೊಂದು ಭರಿಸಲು ಸಾಧ್ಯವೇ, ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗದಂತೆ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ ಆರೋಗ್ಯ ಸೇವೆ ನೀಡಬೇಕು. ಉತ್ತಮ ಲೆನ್ಸ್ ಅಳವಡಿಸಿ ಆಯುಷ್ಮಾನ್ ಕಾರ್ಡ್ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಖರ್ಚು ಭರಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ಕ್ರೀಡಾಂಗಣ ಉನ್ನತೀಕರಿಸಿ : ನಗರದಲ್ಲಿರುವ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ ಸಮರ್ಪಕ ನಿರ್ವಹಣೆಯಾಗುತ್ತಿಲ್ಲ, ಈಜುಕೊಳವಿದ್ದರೂ ಬಳಕೆಯಿಲ್ಲದೆ ಸ್ಥಗಿತಗೊಂಡಿದೆ ಎನ್ನುವ ದೂರುಗಳು ಕೇಳಿಬರುತ್ತಿವೆ.  ಜಿಲ್ಲಾ ಕ್ರೀಡಾಂಗಣದಲ್ಲಿ ಉತ್ತಮ ಸೌಲಭ್ಯ ಅಳವಡಿಕೆ, ಹಾಗೂ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಲು ಕೆಎಂಇಆರ್‍ಸಿ ಅನುದಾನದಡಿ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದ ಅವರು, ಈಜುಕೊಳ ನಿರ್ವಹಣೆಗೆ ಖಾಸಗಿ ಏಜೆನ್ಸಿಗೆ ಜವಾಬ್ದಾರಿ ನೀಡದೆ, ಇತರೆ ಈಜು ತರಬೇತುದಾರರು ಹಾಗೂ ಕೆಲವು ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿ, ಜಿಲ್ಲಾ ಮಟ್ಟದಲ್ಲಿಯೇ ನಿರ್ವಹಣೆ ಮಾಡುವಂತೆ ಸೂಚನೆ ನೀಡಿದರು.

ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ದೂರು ಪುಸ್ತಕ ಕಡ್ಡಾಯ:  ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ದೂರು ಪುಸ್ತಕ ಇಡಬೇಕು ಎಂದು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕುಡಿಯುವ ನೀರಿನ ಅಭಾವ, ಊಟದ ಸಮಸ್ಯೆ, ಶೌಚಾಲಯ ನಿರ್ವಹಣೆ ಸಮರ್ಪಕವಾಗಿಲ್ಲದಿರುವುದು ಸೇರಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಹಾಗಾಗಿ ಮಕ್ಕಳ ದೂರು ಸಂಗ್ರಹಿಸಲು ಕಡ್ಡಾಯವಾಗಿ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳ ದೂರು ಪುಸ್ತಕ ಇಡಬೇಕು. ಪ್ರತಿ ತಿಂಗಳು ವಿದ್ಯಾರ್ಥಿ ನಿಲಯದ ನಿಲಯ ಪಾಲಕರು ತಮ್ಮ ಸಹಿಯೊಂದಿಗೆ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ವರದಿ ಸಲ್ಲಿಸಬೇಕು. ತಾಲ್ಲೂಕು ಪಂಚಾಯಿತಿ ಇಒ ಗಳು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement
Tags :
Amlan Aditya BiswaschitradurgaOfficers should have loyalty and honestyಅಧಿಕಾರಿಗಳಲ್ಲಿ ನಿಷ್ಠೆಅಮ್ಲಾನ್ ಆದಿತ್ಯ ಬಿಸ್ವಾಸ್ಚಿತ್ರದುರ್ಗಪ್ರಾಮಾಣಿಕತೆ ಇರಬೇಕು
Advertisement
Next Article