ಚಿತ್ರದುರ್ಗ ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಸಚಿವ ಡಿ.ಸುಧಾಕರ್
ಸುದ್ದಿಒನ್, ಚಿತ್ರದುರ್ಗ, ಜೂನ್. 26 :ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸಚಿವ ಡಿ.ಸುಧಾಕರ್ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ಭಾಗವಹಿಸಿ ಅವರು ಮಾತನಾಡಿದರು.
ಎಲ್ಲ ಕಡೆಯಿಂದಲೂ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೇಡಿಕೆ ಇದೆ. ಹಾಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲಿದ್ದು, ಕಾರ್ಯಾರಂಭ ಮಾಡಬೇಕು. ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿಗಳು ಹಾಗೂ ತಾ.ಪಂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಣ್ಣಪುಟ್ಟ ದುರಸ್ಥಿಯಿದ್ದಲ್ಲಿ ಪಂಚಾಯಿತಿ ಮಟ್ಟದಲ್ಲಿಯೇ ಆರ್.ಓ. ಘಟಕ ರಿಪೇರಿ ಮಾಡಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಆರ್.ಓ.ಘಟಕಗಳ ನಿರ್ವಹಣೆಗೆ ಒಂದೇ ಏಜೆನ್ಸಿ ನಿರ್ವಹಣೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಸಭೆಗೆ ಮಾಹಿತಿ ನೀಡಿದರು. ವಿದ್ಯುತ್ ಬಿಲ್ ಪಾವತಿಸಿರುವ, ಸುಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಂಬಂಧಪಟ್ಟ ಏಜೆನ್ಸಿಯವರು ಗ್ರಾಮ ಪಂಚಾಯಿತಿಯವರಿಗೆ ಹಸ್ತಾಂತರ ಮಾಡಿದರೆ ಇಂತಹ ಆರ್.ಓ. ಘಟಕಗಳನ್ನು ಪಂಚಾಯಿತಿ ವತಿಯಿಂದಲೇ ನಿರ್ವಹಣೆ ಮಾಡಲು ಕ್ರಮವಹಿಸಲಾಗುವುದು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.