ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶಕ್ಕೆ ಕ್ರಮವಹಿಸಿ : ಸಚಿವ ಡಿ.ಸುಧಾಕರ್
ಸುದ್ದಿಒನ್, ಚಿತ್ರದುರ್ಗ, ಜೂನ್.26 : ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಪಡಿಸಿ ರಾಜ್ಯಮಟ್ಟದಲ್ಲಿ ಉನ್ನತ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಾರಂಭದಿಂದಲೇ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದ್ದ ಚಿತ್ರದುರ್ಗ ಜಿಲ್ಲೆಯು 27ನೇ ಸ್ಥಾನ ಕುಸಿತಕ್ಕೆ ಕಾರಣವೇನು ಎಂದು ಪ್ರಶ್ನಿಸಿದ ಸಚಿವರು, ಡಿಡಿಪಿಐ ಅವರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು. ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಕುರಿತು ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಸಿರುದ್ಧೀನ್ ಮಾತನಾಡಿ, ಶಾಲಾ ಹಂತದಲ್ಲಿ ಉತ್ತಮ ಫಲಿತಾಂಶಕ್ಕೆ ಕ್ರಮವಹಿಸಲಾಗಿದೆ. ರಾಜ್ಯದ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು 10ನೇ ಸ್ಥಾನದೊಳಗೆ ಬರುವಂತೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಶಿಕ್ಷಕರನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಇತರೆ ಕೆಲಸ ಕಾರ್ಯಗಳಿಗೆ ಹೆಚ್ಚಿನದಾಗಿ ಬಳಸಿಕೊಳ್ಳಲಾಗಿದೆ. ಇದು ಫಲಿತಾಂಶ ಇಳಿಮುಖಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇರುವ ಶಾಲೆಗಳಲ್ಲಿ ಆದ್ಯತೆ ಅನುಸಾರ ಪ್ರಾರ್ಥನಾ ಪ್ರಾಂಗಣ ಹಾಗೂ ಊಟದ ಸಭಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ವಿಶೇಷ ಅನುದಾನ ಮಂಜೂರಾತಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.