ಆಯುಷ್ಮಾನ್ ಭವ ಅಂದೋಲನ : ಎಲ್ಲರೂ ಆಯುಷ್ಮಾನ್ ಕಾರ್ಡ್ ಪಡೆಯಿರಿ : ಡಿಹೆಚ್‍ಓ ಡಾ.ಆರ್.ರಂಗನಾಥ್
ಚಿತ್ರದುರ್ಗ. ಸೆ.27: ಆರೋಗ್ಯ ಸುರಕ್ಷತಾ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಆರೋಗ್ಯ ಇಲಾಖೆಯಿಂದ ಆಯುಷ್ಮಾನ್ ಭವ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.
ನಗರದ ಐತಿಹಾಸಿಕ ಕೋಟೆ ಆವರಣದ ಬನಶಂಕರಿ ದೇವಸ್ಥಾನದ ಬಳಿ ಬುಧವಾರ ಜಿಲ್ಲಾ ಆರೋಗ್ಯ ಇಲಾಖೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಇವರ ಸಹಯೋಗದೊಂದಿಗೆ ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಆರೋಗ್ಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಆಯುಷ್ಮಾನ್ ಭವ ಆಂದೋಲನದಲ್ಲಿ ವಿವಿಧ ಕಾರ್ಯ ಚಟುವಟಿಕೆಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆಯೋಜಿಸಲಾಗುತ್ತಿದೆ.
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಕ್ರಿಯವಾಗಿ ನಡೆಯಲಿದೆ. ಆಂದೋಲನದ ಅಂಗವಾಗಿ ಆಯುಷ್ಮಾನ್ ಕಾರ್ಡ್‌ಗಳ ನೋಂದಣಿ ಮತ್ತು ವಿತರಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಡಿಯಲ್ಲಿ ಮನೆ ಬಾಗಿಲಿಗೆ ಆಯುಷ್ಮಾನ್ ಕಾರ್ಡ್‍ಗಳನ್ನು ನೀಡಲಾಗುವುದು.
ಅಲ್ಲದೆ ಅಸಾಂಕ್ರಾಮಿಕ ರೋಗಗಳ ಪತ್ತೆ ಹಾಗೂ ತಪಾಸಣೆ, ಕ್ಷಯ ರೋಗ, ಮಲೇರಿಯಾ ಡೆಂಗ್ಯೂ, ಚಿಕನ್ ಗುನ್ಯಾ, ಕೀಟ ಜನ್ಯ ರೋಗಗಳು, ಕುಷ್ಠರೋಗ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ, ತಾಯಿ ಮತ್ತು ಮಕ್ಕಳ ಆರೋಗ್ಯ ಹಾಗೂ ಪೌಷ್ಠಿಕ ಆರೋಗ್ಯ ಶಿಬಿರ, ಸಿಕ್ಕಲ್ ಸೆಲ್ ಅನಿಮೀಯಾ ತಪಾಸಣೆ (ಬುಡಕಟ್ಟು ಜನಾಂಗದವರಿಗೆ) ಇತರೆ ಪ್ರದೇಶದಲ್ಲಿ ಕಣ್ಣಿನ ತಪಾಸಣೆ ಹಾಗೂ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು ಎಂದರು.
ಮಹಾತ್ಮ ಗಾಂಧೀಜಿಯವರ ಜನ್ಮ ದಿನವಾದ ಅಕ್ಟೋಬರ್ 2ರಂದು ಜಿಲ್ಲೆಯ ಎಲ್ಲ ಗ್ರಾಮ ಹಾಗೂ ನಗರ ಆರೋಗ್ಯ ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಅರಿವು ಮೂಡಿಸುವರು. ಸಾರ್ವಜನಿಕರು ಈ ಮೇಳದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚಂದ್ರಶೇಖರ್ ಕಂಬಳಿಮಠ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ಬುದ್ಧನಗರ ಆರೋಗ್ಯ ಕೇಂದ್ರದ ಎಲ್ಲ ಆರೋಗ್ಯ ಸಿಬ್ಬಂದಿಗಳು, ಯೋಗ ಶಿಕ್ಷಕರು, ಸಾರ್ವಜನಿಕರು ಇದ್ದರು.