ದಾವಣಗೆರೆ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತ : ಶಾಸಕ ಶಾಮನೂರು ಶಿವಶಂಕರಪ್ಪ
ದಾವಣಗೆರೆ,ಅಕ್ಟೋಬರ್.07. ದಾವಣಗೆರೆ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.