ರಾಜ್ಯ ಸಭೆಗೆ ಸೋನಿಯಾ, ಲೋಕಸಭೆಗೆ ಪ್ರಿಯಾಂಕಾ : ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ?
ಸುದ್ದಿಒನ್ : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆಯಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯಸಭಾ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾಗಿರುವುದರಿಂದ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ದಶಕಗಳಿಂದ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಸೋನಿಯಾ ಗಾಂಧಿ ತೊರೆಯಲಿದ್ದಾರೆ. ಸೋನಿಯಾ ಗಾಂಧಿ ಪುತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಇಲ್ಲಿಂದಲೇ ಕಣಕ್ಕೆ ಇಳಿಸಲು ಕಾಂಗ್ರೆಸ್ ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಪ್ರಸ್ತುತ ಉತ್ತರ ಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ 77 ವರ್ಷದ ಸೋನಿಯಾ ಗಾಂಧಿ ಅವರ ವಯಸ್ಸು ಮತ್ತು ಆರೋಗ್ಯದ ದೃಷ್ಟಿಯಿಂದ ಚುನಾವಣಾ ಪ್ರಚಾರ ಸಭೆಗಳು ಮತ್ತು ರ‌್ಯಾಲಿಗಳಲ್ಲಿ ಭಾಗವಹಿಸುವ ಸ್ಥಿತಿಯಲ್ಲಿಲ್ಲದ ಕಾರಣ ಅವರನ್ನು ರಾಜ್ಯಸಭೆಗೆ ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ.
2019 ರ ಜನವರಿಯಲ್ಲಿ ರಾಜಕೀಯ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅದೇ ವರ್ಷ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಎಲ್ಲರ ನಿರೀಕ್ಷೆಗೆ ವ್ಯತಿರಿಕ್ತವಾಗಿ ಪ್ರಚಾರ ಕಾರ್ಯಕ್ಕಷ್ಟೇ ಸೀಮಿತರಾದರು.
ಆಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ನೇಮಿಸಿದ್ದರು. ಈಗ ಸೋನಿಯಾ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರದಿಂದ ಹಿಂದೆ ಸರಿಯುತ್ತಿದ್ದಂತೆ ಅವರಿಗೆ ಪ್ರತಿಷ್ಠಿತ ಸ್ಥಾನ ನೀಡಲು ವೇದಿಕೆ ಸಜ್ಜಾಗಿದೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ 2024 ರ ಚುನಾವಣೆಯಲ್ಲಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳಿವೆ.
ಇನ್ನು, ಕಾಂಗ್ರೆಸ್ ನಾಯಕ ಹಾಗೂ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಇದುವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಸಾಯರ್ ನಾಸೀರ್ ಹುಸೇನ್ ಅವರಿಗೆ ಮತ್ತೆ ಟಿಕೆಟ್ ನೀಡಲಾಗುವುದು.ಅಜಯ್ ಮಾಕನ್ ಅವರನ್ನೂ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಹೆಚ್ಚಿದೆ ಎಂಬ ವರದಿಗಳಿವೆ. ಆದರೆ ಕಾಂಗ್ರೆಸ್ ಪಕ್ಷವು ತನ್ನ ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಒಂದೆರೆಡು ದಿನದಲ್ಲಿ ಪ್ರಕಟಿಸಲಿದೆ.
ಜನವರಿ 29 ರಂದು ರಾಜ್ಯಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ತೆರವಾಗಲಿರುವ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಇದೇ ತಿಂಗಳ 27ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಇದೇ ತಿಂಗಳ 15ಕ್ಕೆ ನಾಮಪತ್ರ ಸಲ್ಲಿಸಲು ಗಡುವು ಮುಕ್ತಾಯವಾಗಲಿದ್ದು, ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಇದೇ ತಿಂಗಳ 20 ಕೊನೆಯ ದಿನಾಂಕವಾಗಿದ್ದು, ಇದೇ 27 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಫಲಿತಾಂಶವೂ ಕೂಡ ಅಂದೇ ಪ್ರಕಟವಾಗಲಿದೆ.