ತೈಲ ಬೆಲೆ ಜಾಸ್ತಿ ಮಾಡಿ ಗ್ಯಾರಂಟಿಗೆ ಹಣ ಹಾಕುತ್ತಿದ್ದಾರಾ..? : ಗ್ಯಾರಂಟಿಗೆ ಖರ್ಚಾಗುತ್ತಿರುವ ಹಣದ ಲೆಕ್ಕ ಹೇಳಿದ ಸಿಎಂ
ಬೆಂಗಳೂರು: ಲೋಕಸಭಾ ಚುನಾವಣೆಯ ಬೆನ್ನಲ್ಲೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಿಂದ ವಾಹನ ಸವಾರರಿಗೆ ಬೇಸರವಾಗಿದೆ. ಆದರೆ ಈ ವಿಚಾರ ವಿಪಕ್ಷ ನಾಯಕರಿಗೆ ಅಸ್ತ್ರವಾಗಿದೆ. ಹೀಗಾಗಿಯೇ ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಪೆಟ್ರೋಲ್-ಡಿಸೇಲ್ ದರದಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿವೆ. ಇದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ, ಬಿಜೆಪಿ ನಾಯಕರು ನಮ್ಮ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ತಿರುಗಿ ಬೀಳಬೇಕಿರೋದು ಎಂದಿದ್ದಾರೆ.
ಇದೆ ವೇಳೆ ಗ್ಯಾರಂಟಿಗಳಿಗೆ ಎಷ್ಟು ಹಣ ಖರ್ಚಾಗುತ್ತೆ ಎಂಬುದರ ಮಾಹಿತಿಯನ್ನು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಕೋಟಿಯನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ಎಲ್ಲಾ ಜಾತಿ - ಸಮುದಾಯಗಳ ಬಡವರು ಮತ್ತು ಮಧ್ಯಮವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ.
ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ವಿಪಕ್ಷ ನಾಯಕ ಆರ್ ಅಶೋಕ್ ಅವರ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗುವುದೂ ಇಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಅವರಲ್ಲಿ ಇಲ್ಲ. ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.