ಬೆಳಗಾವಿ ಅಧಿವೇಶನ: ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ ನೀಡಿದ ಸಚಿವ ಮಹದೇವಪ್ಪ
ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಹಲವು ವಿಷಯಗಳು ಚರ್ಚೆಗೆ ಬರುತ್ತಿವೆ. ರೈತರು ಕೂಡ ಪ್ರತಿಭಟನೆ ನಡೆಸುತ್ತಿದ್ದರು. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆ ಸುವರ್ಣ ಸೌಧದ ಎದುರು ನಿನ್ನೆಯಿಂದ ಪ್ರತಿಭಟನೆ ಕೈಗೊಂಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ರೈತರಿಗೆ ಭರವಸೆ ನೀಡಿದ್ದಾರೆ.
ಈ ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆಯನ್ನು ಹಿಂಪಡೆಯಲಾಗುವುದು. ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು. ಹಾಲಿನ ದರ ಹೆಚ್ಚಳ, ಕೃಷಿ ಕಾಯ್ದೆ ವಾಪಸ್, ಕನಿಷ್ಠ ಬೆಂಬಲ ಬೆಲೆಯ ಶಾಸನ ಬದ್ಧ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ರೈತರು ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿಗೆ ಹೋದ ಮೇಲೆ ಇವುಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.
ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ಮಹಾದಾಯಿ ಮತ್ತು ಮೇಕೆದಾಟು ಯೋಜನೆ ಆರಂಭಿಸಲು ಯಾವುದೇ ತಕರಾರು ಇರುವುದಿಲ್ಲ. ರೈತರ ಹಿತ ಕಾಪಾಡುವುದಕ್ಕೆ ಸರ್ಕಾರ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸಚಿವ ಮಹದೇವಪ್ಪ ಅವರು ರೈತರಿಗೆ ಭರವಸೆ ನೀಡಿದ್ದಾರೆ.
ಧರಣಿ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ ಈಗ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರೈತರ ಮನವಿಗೆ ಬೆಲೆ ಕೊಡಬೇಕು. ಇಲ್ಲದೆ ಹೋದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದು ಗ್ಯಾರಂಟಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆಯನ್ನು ನೀಡಿದ್ದಾರೆ.