ಖ್ಯಾತ ಗಾಯಕಿ ಪಿ.ಸುಶೀಲಾ ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಚೆನ್ನೈ, ಆಗಸ್ಟ್ 18 : ಖ್ಯಾತ ಚಲನಚಿತ್ರ ಗಾಯಕಿ ಪಿ. ಸುಶೀಲಾ (86) ಶನಿವಾರ (ಆಗಸ್ಟ್ 18) ಅಸ್ವಸ್ಥರಾದರು. ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಶೀಲಾ ಕೆಲ ದಿನಗಳಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು. ಶನಿವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಕ್ಷಣ ವೈದ್ಯರು ಚಿಕಿತ್ಸೆ ನೀಡಿದರು. ಇದು ಸಾಮಾನ್ಯ ಹೊಟ್ಟೆ ನೋವು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸುಶೀಲಾ ಅವರ ಆರೋಗ್ಯದ ಬಗ್ಗೆ ಆತಂಕ ಬೇಡ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪದ್ಮಭೂಷಣ ಪುರಸ್ಕೃತೆ ಸುಶೀಲಾ ಅವರು, ಕನ್ನಡ ಚಿತ್ರರಂಗದಲ್ಲಿ ಹಲವು ಅದ್ಭುತ ಗೀತೆಗಳನ್ನು ಹಾಡಿ ಸಂಗೀತ ಪ್ರೇಮಿಗಳನ್ನು ರಂಜಿಸಿದ್ದಾರೆ. ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಸೇರಿದಂತೆ 9 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರು ಚಿತ್ರದಲ್ಲಿ ಕನ್ನಡದ ಹಿರಿಯ ನಟಿ ಸರೋಜಾದೇವಿ ಸೇರಿದಂತೆ ಪ್ರಸಿದ್ಧ ನಟಿಯರಿಗೆ ಹಾಡುಗಳನ್ನು ಹಾಡಿದ್ದಾರೆ. ಸುಶೀಲಾ ತಮ್ಮ ಅದ್ಭುತ ಕಂಠ ಸಿರಿಯಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಇದೀಗ ಅನಾರೋಗ್ಯದಿಂದ ಚೆನ್ನೈನ ಆಳ್ವಾರ್ ಪೇಟಾದ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಸುಶೀಲಾ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾಗೂ ಆಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.