ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ
ಚಿತ್ರದುರ್ಗ. ಜುಲೈ.03: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಜನರಿಗೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ಒದಗಿಸುತ್ತಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರ ದಾಖಲೆಗಳನ್ನು ಪರಿಶೀಲಿಸಿದಾಗ ಬಹಳ ಕಡಿಮೆ ಸಂಖ್ಯೆಯಲ್ಲಿ ಪರಿಶಿಷ್ಟ ಪಂಗಡದ ಎಸ್.ಟಿ.ಜನಾಂಗದವರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದೆ.
ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ಪಂಗಡದವರು ವಾಸಿಸುತ್ತಿರುವುದರಿಂದ, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಸರ್ಕಾರಿ ಸೌಲಭ್ಯ ಪಡೆಯಬಹುದು ಎಂದು ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.