ಸನಾತನ ಧರ್ಮವನ್ನು ಅವಮಾನಿಸಿದರೆ ಫಲಿತಾಂಶ ಹೀಗೆ ಇರುತ್ತದೆ : ಕಾಂಗ್ರೆಸ್ ವಿರುದ್ಧ ಮಾಜಿ ಕ್ರಿಕೆಟಿಗ ಹೇಳಿದ್ದೇನು ?
ಬೆಂಗಳೂರು, ಸುದ್ದಿಒನ್ : 2024 ರ ಸಾರ್ವತ್ರಿಕ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು, ಭಾನುವಾರ ನಾಲ್ಕು ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗಿದ್ದು,
ಮಿಜೋರಾಂನ ಫಲಿತಾಂಶ ಸೋಮವಾರ
ಪ್ರಕಟವಾಗಲಿದೆ.
ನಾಲ್ಕು ರಾಜ್ಯಗಳ ಪೈಕಿ ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಅಧಿಕಾರ ಬಂದಿದೆ. ಉಳಿದಂತೆ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಯ ಬಗ್ಗೆ ನಾನಾ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೂಡ ಕಾಂಗ್ರೆಸ್ ಪಕ್ಷದ ಹಿನ್ನಡೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸನಾತನ ಧರ್ಮವನ್ನು ಅವಮಾನಿಸಿದ್ದರಿಂದ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎಂದು ಮಾಜಿ ಟ್ವೀಟ್ ಮಾಡಿದ್ದಾರೆ. ಸನಾತನ ಧರ್ಮವನ್ನು ನಿಂದಿಸಿದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಚುನಾವಣೆಗೂ ಮುನ್ನ ಸನಾತನ ಧರ್ಮ ತೊಲಗಬೇಕು ಎಂದು ಹೇಳುವ ಮೂಲಕ ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದರು. ಉದಯನಿಧಿ ಸ್ಟಾಲಿನ್ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಸ್ಟಾಲಿನ್ ಹೇಳಿಕೆಯನ್ನು ಹಿಂದೂ ಧಾರ್ಮಿಕ ಸಂಘಟನೆಗಳು, ಬಜರಂಗದಳ, ವಿಎಚ್‌ಪಿ ಮತ್ತು ಬಿಜೆಪಿ ತೀವ್ರವಾಗಿ ಖಂಡಿಸಿದ್ದವು. ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಗಿತ್ತು. ಪಂಚರಾಜ್ಯಗಳ ಚುನಾವಣೆಗೂ ಮುನ್ನ ನಡೆದಿರುವ ಈ ಘಟನೆ ಸ್ವಲ್ಪ ಮಟ್ಟಿಗೆ ಬಿಜೆಪಿ ಪರವಾಗಿದೆ ಎನ್ನಬಹುದು.
ಪ್ರಧಾನಿ ಮೋದಿ ಕೂಡ ಹಲವು ಸಭೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸನಾತನ ಧರ್ಮವನ್ನು ನಾಶ ಮಾಡುತ್ತಿದೆ ಎಂದು ಟೀಕಿಸಿದ್ದರು.
ಆದರೆ ಡಿಎಂಕೆಯ ಮಿತ್ರ ಪಕ್ಷವಾದ ಕಾಂಗ್ರೆಸ್ ಪಕ್ಷವು ವಿವಾದದಿಂದ ದೂರ ಉಳಿಯಲು ಪ್ರಯತ್ನಿಸಿತು. ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸುವುದು ತಮ್ಮ ನೀತಿಯಾಗಿದೆ ಎಂದು ಹೇಳಿತ್ತು.
ಆದರೆ, ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಸೋತಿರುವ ಹಿನ್ನೆಲೆಯಲ್ಲಿ ವೆಂಕಟೇಶ್ ಪ್ರಸಾದ್ ಮತ್ತೊಮ್ಮೆ ಟ್ವೀಟ್ ಮೂಲಕ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಇದೇ ವೇಳೆ ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಸಿದರು. ಬಿಜೆಪಿಯ ಐತಿಹಾಸಿಕ ವಿಜಯಕ್ಕೆ ಅಭಿನಂದನೆ ಸಲ್ಲಿಸಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಅತ್ಯುತ್ತಮ ನಾಯಕತ್ವ ಮತ್ತು ಬಿಜೆಪಿ ತಳಮಟ್ಟದ ಕಾರ್ಯಕರ್ತರ ಶ್ರಮಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.