ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ
ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು ಮಹಿಳೆಯರ ವಿಡಿಯೋ ಅದು. ಈಗಾಗಲೇ ಆ ಪೆನ್ ಡ್ರೈವ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಚಾರ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. 'ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.