ಕನ್ನಡ ಭಾಷೆ ಉಳಿಸಲು ಮುಂದಾದ ಸಿದ್ದರಾಮಯ್ಯ: ಪರಭಾಷಿಗರಿಗೂ ಕನ್ನಡ ಕಡ್ಡಾಯವೆಂದ್ರು ಸಿಎಂ
ಬೆಂಗಳೂರು: ಕರ್ನಾಟಕದಲ್ಲಿಯೇ ಕನ್ನಡ ಭಾಷೆಗೆ ಸಂಕಷ್ಟ ಇರುವುದು ಹೊಸ ವಿಚಾರವೇನು ಅಲ್ಲ. ಎಲ್ಲಿ ನೋಡಿದರೂ ನಮ್ಮವರೇ ಬೇರೆ ಭಾಷೆಯನ್ನೇ ಹೆಚ್ಚಾಗಿ ಮಾತನಾಡುತ್ತಾರೆ. ನವೆಂಬರ್ ಬಂತು ಅಂದ್ರೆ ಕನ್ನಡಕ್ಕಾಗಿ ಕೈ ಎತ್ತುವವರ ಸಂಖ್ಯೆ ಹೆಚ್ಚಾಗುತ್ತದೆ. ಆದರೆ ಈಗ ಸಿದ್ದರಾಮಯ್ಯ ಅವರು ಕನ್ನಡ ಉಳಿಸುವ ನಿಟ್ಟಿನಲ್ಲಿ ಒಂದು ಆದೇಶ ನೀಡಿದ್ದಾರೆ.
ಕರ್ನಾಟಕದಲ್ಲಿ ಪರಭಾಷಿಕರೇ ಹೆಚ್ಚು ವಾಸ ಮಾಡುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅವರೇ ಇದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ನೆಲೆಸುವ ಪರಭಾಷಿಗರು ಕೂಡ ಕಡ್ಡಾಯವಾಗಿ ಕನ್ನಡ ಕಲಿಯಬೇಕು ಎಂದಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಸಂರಕ್ಷಣೆ ಮಾಡಿಕೊಂಡು ಹೋಗಬೇಕಾ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಾಗಿದೆ. ಇದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕವಾಗಿದೆ.
ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೇ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ. ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗ್ಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದರು.