ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಮಕ್ಕಳಿಂದ ಶೌಚಾಲಯ ಸ್ವಚ್ಛತೆ..!
ಸುದ್ದಿಒನ್, ಶಿವಮೊಗ್ಗ : ಬೆಂಗಳೂರಿನ ಪೀಣ್ಯದ ಅಂದರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ವಿಚಾರ ಬಾರೀ ಸುದ್ದಿಯಾಗಿತ್ತು. ಅದು ಮಾಸುವ ಮುನ್ನವೇ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಅಂಥದ್ದೊಂದು ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿರುವ ಘಟನೆ ನಡೆದಿದೆ.
ಭದ್ರಾವತಿ ತಾಲೂಕಿನ ಕೋಮಾರನಹಳ್ಳಿಯ ಗುಡ್ಡದ ನೇರಲೆಕೆರೆ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ಸೇರಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದಾರೆ. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ನೀಡಿದೆ.
ಶಾಲಾ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಶಿಕ್ಷಕರ ವಿರುದ್ಧ ಕಾನೂನು ಕ್ರಮಕ್ಕೆ ಸಂಘಟನೆ ಹಾಗೂ ಪೋಷಕರು ಆಗ್ರಹಿಸಿದ್ದಾರೆ. ಪೀಣ್ಯದಲ್ಲಿ ನಡೆದ ಘಟನೆ ರಾಜ್ಯದಲ್ಲಿ ಹೆಚ್ಚು ಸದ್ದು ಮಾಡಿತ್ತು. ರಾಜಕೀಯ ತಿರುವನ್ನು ಪಡೆದುಕೊಂಡಿತ್ತು. ಆ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲೂ ನಡೆದಿದೆ. ಶಾಲೆಯ ಶಿಕ್ಷಕರು ಮಕ್ಕಳಿಂದ ಕೆಲಸ ಮಾಡಿಸುವುದು ಸರ್ವೇ ಸಾಮಾನ್ಯ. ಆದರೆ ಶಾಲೆಯಲ್ಲಿ ಮಕ್ಕಳು ಕ್ರಿಯಾಶೀಲರಾಗಿರುವುದಕ್ಕೆ ಯಾವ ರೀತಿಯ ಕೆಲಸಗಳನ್ನು ಕೊಡಬೇಕು ಎಂಬುದು ಶಿಕ್ಷಕರ ಗಮನಕ್ಕೆ ಇರಬೇಕಾಗುತ್ತದೆ. ಏನು ಅರಿಯದ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವುದು ಡೇಂಜರ್ ಎಂಬುದು ಅವರ ಗಮನಕ್ಕೂ ಇರಬೇಕು. ಯಾಕಂದ್ರೆ ಈಗಾಗಲೇ ಶೌಚಾಲಯ ಸ್ವಚ್ಛಗೊಳಿಸಲು ಹೋದ ಮಕ್ಕಳು ಅನಾರೋಗ್ಯಕ್ಕೆ ಈಡಾಗಿದ್ದಾರೆ. ಇದೀಗ ಶಿವಮೊಗ್ಗದ ಈ ಘಟನೆ ಸಂಬಂಧ ಕಾನೂನು ಕ್ರಮಕ್ಕೆ ಒತ್ತಾಯ ಮಾಡುತ್ತಿದ್ದಾರೆ.